ಮಕ್ಕಳಿಗೆ ಕಳಪೆ ಶೂ–ಸಾಕ್ಸ್ ವಿತರಣೆ ಆರೋಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗರಂ
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಕುರಿತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂಗಳು ಕೇವಲ ಕೆಲವೇ ದಿನಗಳಲ್ಲಿ ಕಿತ್ತುಹೋಗುತ್ತಿರುವುದು ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.
ಧಾರವಾಡ, ರಾಯಚೂರು, ತುಮಕೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಕ್ಕಳಿಗೆ ವಿತರಿಸಿರುವ ಶೂಗಳ ಅಡಿಭಾಗ ಕಳಚಿಕೊಂಡಿದ್ದು, ಹೊಲಿಗೆ ಬಿಟ್ಟು ಕೆಲವೇ ದಿನಗಳಲ್ಲಿ ಹಾನಿಗೀಡಾಗಿವೆ ಎಂದು ಅವರು ದೂರಿದ್ದಾರೆ.
ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಖರ್ಚು ಮಾಡಿ ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್‌ಗಳನ್ನು ಪೂರೈಸಿರುವುದು ಅತ್ಯಂತ ಖಂಡನೀಯ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ಬಡ ಮತ್ತು ಅಂಚಿನಲ್ಲಿರುವ ಕುಟುಂಬಗಳ ಮಕ್ಕಳ ಶಿಕ್ಷಣದ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಜಾರಿಗೊಳಿಸಿರುವ ಯೋಜನೆಯಲ್ಲಿಯೇ ಇಂತಹ ಅವ್ಯವಸ್ಥೆ ಕಂಡುಬರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ವಿದ್ಯಾರ್ಥಿಗಳಿಗೆ ವಿತರಿಸುವ ಮೊದಲು ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಬೇಕಾದ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿರುವ ಅವರು, ಕಳಪೆ ಗುಣಮಟ್ಟದ ವಸ್ತುಗಳನ್ನು ಪೂರೈಸಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ಅಗತ್ಯ
ಅಲ್ಲದೆ, ಗುಣಮಟ್ಟ ಪರಿಶೀಲಿಸದೆ ಮಂಜೂರಾತಿ ನೀಡಿದ ಅಧಿಕಾರಿಗಳ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್‌ಗಳನ್ನು ತಕ್ಷಣವೇ ಬದಲಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಹೊಸ ಸಾಮಗ್ರಿಗಳನ್ನು ಮರು ವಿತರಿಸಬೇಕು. ಇಲ್ಲವಾದಲ್ಲಿ ಸರ್ಕಾರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.