Loading...

ಕಾವೇರಿ ವಿವಾದ ಕನ್ನಡ ಪರ ಸಂಘಟನೆಗಳಿಂದ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ! ಬಂದ್ ಬೇಡ ಎಂದ ಎಚ್.ಡಿ.ಕೆ.

Suddi Mitra Editor

July 31, 2026 • 04:17 PM

ಕಾವೇರಿ ವಿವಾದ ಕನ್ನಡ ಪರ ಸಂಘಟನೆಗಳಿಂದ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ! ಬಂದ್ ಬೇಡ ಎಂದ ಎಚ್.ಡಿ.ಕೆ.
Image Credit / Source: 16:9

ಬೆಂಗಳೂರು :ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ ಆಕ್ರೋಶ ತೀವ್ರಗೊಂಡಿದ್ದು, ಈ ಹಿನ್ನೆಲೆ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನೀರು ಬಿಡುಗಡೆ ಆದೇಶವನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದ ರೈತರು ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಹರಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಹಿತಾಸಕ್ತಿಗಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು. ರಾಜ್ಯದ ವ್ಯಾಪಾರಸ್ಥರು, ಸಾರಿಗೆ ಸಂಸ್ಥೆಗಳು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಬಂದ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ರಾಜ್ಯ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಪ್ರವಾಸಕ್ಕೆ ತಮ್ಮ ವಿರೋಧವಿಲ್ಲ. ಆದರೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಂದ್ ಬೇಡ ಎಂದ ಎಚ್.ಡಿ.ಕೆ

ಇನ್ನೊಂದೆಡೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 54–55 ಟಿಎಂಸಿ ನೀರು ಲಭ್ಯವಿದ್ದು, ಅದರಲ್ಲಿ 10 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ ನೀರಿನಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿನ ಅಗತ್ಯ ಹಾಗೂ ಪರಿಸರ ಸಂರಕ್ಷಣೆಗೆ ಸಾಕಷ್ಟು ಪ್ರಮಾಣದ ನೀರನ್ನು ಮೀಸಲಿಡಬೇಕಿರುವುದರಿಂದ, ಮುಂದಿನ ಹರಿವಿನ ಅಂದಾಜಿನ ಆಧಾರದ ಮೇಲೆ ನೀರು ಬಿಡುಗಡೆ ಮಾಡಲು ಸೂಚಿಸಿರುವುದು ಸೂಕ್ತವಲ್ಲ ಎಂದು ಅವರು ಹೇಳಿದರು.

ಆದರೆ ಕಾವೇರಿ ವಿಚಾರದಲ್ಲಿ ರಾಜ್ಯದ ಹಕ್ಕಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ನಡೆಸುವುದು ಸರಿಯಾದ ಮಾರ್ಗವಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

- Advertisement -